ನವದೆಹಲಿ, ಜೂನ್ 12: ಮುಖ್ಯಮಂತ್ರಿ ಹುದ್ದೆ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯದ ಭದ್ರತಾ ಮೂಲಸೌಕರ್ಯ ಹಾಗೂ ಪೊಲೀಸ್ ಇಲಾಖೆಯ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಿದರು.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರೊಂದಿಗೆ ಕರ್ನಾಟಕಕ್ಕೆ ಸಂಬಂಧಿಸಿದ ಹಲವು ಪ್ರಮುಖ ವಿಚಾರಗಳ ಬಗ್ಗೆ ರಚನಾತ್ಮಕ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ.
ಭೇಟಿಯ ವೇಳೆ ರಾಜ್ಯದಲ್ಲಿ ಎರಡು ಹೆಚ್ಚುವರಿ ಭಾರತೀಯ ರಿಸರ್ವ್ ಬೆಟಾಲಿಯನ್ಗಳ (IRB) ಸ್ಥಾಪನೆ, ಪೊಲೀಸ್ ಇಲಾಖೆಯ ವಿವಿಧ ಚಟುವಟಿಕೆಗಳಿಗೆ ಸಿಎಸ್ಆರ್ ನಿಧಿಯ ಬಳಕೆ, ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯ ವಿಸ್ತರಣೆ ಹಾಗೂ ಕಾರಾಗೃಹಗಳ ಆಧುನೀಕರಣಕ್ಕೆ ಕೇಂದ್ರ ಸರ್ಕಾರದ ಸಹಕಾರ ಕೋರಲಾಗಿದೆ.
ಇದೇ ವೇಳೆ, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಪ್ರತಿಷ್ಠಿತ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿ ನೀಡುವ ಪ್ರಸ್ತಾವನೆ ಕೇಂದ್ರ ಸರ್ಕಾರದ ಪರಿಶೀಲನೆಯಲ್ಲಿದ್ದು, ರಾಜ್ಯ ಪೊಲೀಸ್ ಪಡೆಗೆ ಈ ಗೌರವ ಶೀಘ್ರ ದೊರಕುವಂತೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ದೇಶದ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಸೇವೆ ಮತ್ತು ಸಾಧನೆಯನ್ನು ಪರಿಗಣಿಸಿ ಈ ಗೌರವ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.
ಇನ್ನೊಂದೆಡೆ, ವಿಜಯನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಎರಡು ಹೊಸ ಐಆರ್ಬಿ ಬೆಟಾಲಿಯನ್ಗಳನ್ನು ಸ್ಥಾಪಿಸಲು ಸುಮಾರು 243.87 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆಯನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಈಗಾಗಲೇ ಸಲ್ಲಿಸಲಾಗಿದೆ. ಈ ಯೋಜನೆಗೆ ತ್ವರಿತ ಅನುಮೋದನೆ ನೀಡುವಂತೆ ಮುಖ್ಯಮಂತ್ರಿ ಅಮಿತ್ ಶಾ ಅವರ ಗಮನ ಸೆಳೆದಿದ್ದಾರೆ.
ರಾಜ್ಯದ ಆಂತರಿಕ ಭದ್ರತೆ, ಪೊಲೀಸ್ ವ್ಯವಸ್ಥೆಯ ಆಧುನೀಕರಣ ಹಾಗೂ ಕಾನೂನು ಸುವ್ಯವಸ್ಥೆ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಮನವಿಗಳನ್ನು ಕೇಂದ್ರ ಸರ್ಕಾರದ ಮುಂದಿರಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.