ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆ ಸುತ್ತ ರಾಜಕೀಯ ವಾಗ್ವಾದ ತೀವ್ರಗೊಂಡಿರುವ ಬೆನ್ನಲ್ಲೇ, ಸಚಿವ ಎಂ.ಬಿ. ಪಾಟೀಲ್ ಅವರ ಹೇಳಿಕೆಗೆ ಮಾಜಿ ಶಾಸಕ ಅನಿತಾ ಕುಮಾರಸ್ವಾಮಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಹೆಸರಿನಲ್ಲಿ 100 ಎಕರೆ ಜಮೀನು ಇದೆ ಎಂಬ ಆರೋಪವನ್ನು ತಳ್ಳಿಹಾಕಿರುವ ಅವರು, ವೈಯಕ್ತಿಕ ವಿಚಾರಗಳನ್ನು ರಾಜಕೀಯ ಚರ್ಚೆಗೆ ಎಳೆದು ತರುವುದು ಸರಿಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಬಿಡದಿ ಟೌನ್ಶಿಪ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನಿಲುವನ್ನು ಟೀಕಿಸುವ ವೇಳೆ ಸಚಿವ ಎಂ.ಬಿ. ಪಾಟೀಲ್, ಅನಿತಾ ಕುಮಾರಸ್ವಾಮಿ ಹೆಸರಿನಲ್ಲಿ 100 ಎಕರೆ ಜಮೀನು ಇದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು.
ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿದ ಅನಿತಾ ಕುಮಾರಸ್ವಾಮಿ, "ನನ್ನ ಹೆಸರಿನಲ್ಲಿ 100 ಎಕರೆ ಅಲ್ಲ, ಕೇವಲ 32 ಎಕರೆ ಜಮೀನು ಮಾತ್ರ ಇದೆ. ವಾಸ್ತವಾಂಶಗಳನ್ನು ಪರಿಶೀಲಿಸದೇ ರಾಜಕೀಯ ದುರುದ್ದೇಶದಿಂದ ಸುಳ್ಳು ಆರೋಪ ಮಾಡುವುದು ಸಾರ್ವಜನಿಕ ಜೀವನಕ್ಕೆ ಶೋಭೆ ತರುವುದಿಲ್ಲ" ಎಂದು ಹೇಳಿದ್ದಾರೆ.
ಇದೇ ವೇಳೆ ರಾಜಕೀಯ ಭಿನ್ನಾಭಿಪ್ರಾಯಗಳ ಹೆಸರಿನಲ್ಲಿ ಕುಟುಂಬದ ಸದಸ್ಯರನ್ನು ಗುರಿಯಾಗಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟ ಅವರು, "ವೈಯಕ್ತಿಕ ವಿಚಾರಗಳನ್ನು ಚರ್ಚಿಸುವ ಕೀಳುಮಟ್ಟದ ರಾಜಕಾರಣದಿಂದ ದೂರ ಇರಬೇಕು. ನನ್ನ ಹಾಗೂ ನನ್ನ ಕುಟುಂಬದ ವಿರುದ್ಧ ಆಧಾರರಹಿತ ಆರೋಪಗಳನ್ನು ಮುಂದುವರಿಸಿದರೆ, ಕಾನೂನು ಕ್ರಮದ ಮೂಲಕವೇ ಸೂಕ್ತ ಉತ್ತರ ನೀಡಲಾಗುವುದು" ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬಿಡದಿ ಟೌನ್ಶಿಪ್ ಯೋಜನೆ ಕುರಿತ ವಿವಾದ ಈಗ ರಾಜಕೀಯ ಆರೋಪ-ಪ್ರತ್ಯಾರೋಪಗಳ ಹಂತ ತಲುಪಿದ್ದು, ಮುಂದಿನ ದಿನಗಳಲ್ಲಿ ಈ ವಿಚಾರ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
Tags:#AnithaKumaraswamy #MBPatil #BidadiTownship #HDKumaraswamy #JDS #Congress #KarnatakaPolitics #Bengaluru #PoliticalWar #LandIssue #Bidadi #KarnatakaNews #BreakingNews #PoliticalControversy #LegalAction #AnithaWarning #MandyaPolitics #Ramanagara #KannadaNews #KarunaaduRounds