ಕಾರವಾರ | ಮನೆಯಲ್ಲಿ ಸಂಗ್ರಹಿಸಿದ್ದ ಅಡಿಕೆಗೆ ಆಕಸ್ಮಿಕ ಬೆಂಕಿ: ₹5 ಲಕ್ಷಕ್ಕೂ ಅಧಿಕ ನಷ್ಟ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಡಿದಂಟಕಲ್ ಗ್ರಾಮದಲ್ಲಿ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಗೊಳಗಾದ ಘಟನೆ ನಡೆದಿದೆ.
ಶೇಡಿದಂಟಕಲ್ ಗ್ರಾಮದ ವಿನಾಯಕ ಮಂಜುನಾಥ ಹೆಗಡೆ ಅವರಿಗೆ ಸೇರಿದ ಮನೆಯಲ್ಲಿ ಸಂಗ್ರಹಿಸಲಾಗಿದ್ದ 70ಕ್ಕೂ ಹೆಚ್ಚು ಅಡಿಕೆ ಚೀಲಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣ ಅಡಿಕೆ ಸುಟ್ಟು ಕರಕಲಾಗಿದ್ದು, ಸುಮಾರು ₹5 ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ ಸಂಭವಿಸಿರುವುದಾಗಿ ಪ್ರಾಥಮಿಕ ಅಂದಾಜು ತಿಳಿಸಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯ ನಿವಾಸಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಿಯಂತ್ರಿಸಲು ಮುಂದಾದರು. ಅವರ ಸಮಯೋಚಿತ ಕಾರ್ಯಾಚರಣೆಯಿಂದ ಬೆಂಕಿ ಇನ್ನಷ್ಟು ವ್ಯಾಪಿಸುವುದನ್ನು ತಡೆದು, ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು ತಪ್ಪಿಸಲಾಗಿದೆ.
ಬೆಂಕಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಸಂಬಂಧಪಟ್ಟ ಅಧಿಕಾರಿಗಳು ಘಟನೆಯ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.