ಚಿಕ್ಕಮಗಳೂರು: ಕಾಫಿನಾಡು ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಬಿರುಗಾಳಿಯ ಪರಿಣಾಮವಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಮೂಡಿಗೆರೆ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಹಾಗೂ ಪ್ರಾಥಮಿಕ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
ತಾಲೂಕಿನಲ್ಲಿ ಭಾನುವಾರ ಮಧ್ಯಾಹ್ನದಿಂದಲೇ ಗಾಳಿ-ಮಳೆಯ ತೀವ್ರತೆ ಹೆಚ್ಚಾಗಿದ್ದು, ಹಲವೆಡೆ ಮರಗಳು ಧರೆಗುರುಳಿ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ಕೆಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, ವಿದ್ಯುತ್ ತಂತಿಗಳ ಮೇಲೆ ಮರಗಳು ಬಿದ್ದ ಪರಿಣಾಮ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಪರಿಣಾಮ, ಹಲವಾರು ಗ್ರಾಮಗಳು ಕತ್ತಲಿನಲ್ಲಿ ಕಾಲ ಕಳೆಯುವಂತಾಗಿದೆ.
ಹವಾಮಾನದ ವೈಪರೀತ್ಯವನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳ ಸುರಕ್ಷತೆಯನ್ನು ಆದ್ಯತೆಯಾಗಿ ಪರಿಗಣಿಸಿ, ಮೂಡಿಗೆರೆ ತಹಶೀಲ್ದಾರ್ ಅಶ್ವಿನಿ ಅವರು ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಮಲೆನಾಡಿನ ವಿವಿಧ ಭಾಗಗಳಲ್ಲಿ ಭಾರೀ ಗಾಳಿ ಮತ್ತು ಮಳೆಯ ಅಬ್ಬರ ಮುಂದುವರಿದಿರುವುದರಿಂದ ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಸಂಚರಿಸದಂತೆ ಹಾಗೂ ಹವಾಮಾನ ಇಲಾಖೆಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆಡಳಿತ ಮನವಿ ಮಾಡಿದೆ. ಜಿಲ್ಲಾಡಳಿತ ಹಾಗೂ ಸಂಬಂಧಿತ ಇಲಾಖೆಗಳು ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿವೆ.
ಹೆಚ್ಚಿನ ರಾಜ್ಯ, ಜಿಲ್ಲೆ ಹಾಗೂ ಬ್ರೇಕಿಂಗ್ ಸುದ್ದಿಗಳಿಗಾಗಿ ಭೇಟಿ ನೀಡಿ: www.karunaadutimes.com�
Tags:#Mudigere #Chikkamagaluru #HeavyRain #Malenadu #SchoolHoliday #Anganwadi #RainAlert #KarnatakaRain #WeatherUpdate #MalenaduRain #ChikkamagaluruNews #KarnatakaNews #BreakingNews #KarunaaduTimes #wwwKarunaaduTimesCom