ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಎಪಿಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ, ಚಾಲಕ ಸೇರಿ ಇಬ್ಬರ ದುರ್ಮರಣ
ಚಿಕ್ಕಬಳ್ಳಾಪುರ: ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ (NH-44)ಯಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (APSRTC)ಗೆ ಸೇರಿದ ಬಸ್ನ ಚಾಲಕ ಹಾಗೂ ಓರ್ವ ಪ್ರಯಾಣಿಕ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪೈಲಗುರ್ಕಿ ಸಮೀಪ ನಡೆದಿದೆ.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆಂಧ್ರಪ್ರದೇಶದ ಕರ್ನೂಲಿನಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ಬಸ್, ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಬಸ್ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಲಕ್ಷ್ಮಣ್ (52) ವಾಹನದೊಳಗೆ ಸಿಲುಕಿಕೊಂಡಿದ್ದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಕ್ರೇನ್ ಸಹಾಯದಿಂದ ಬಸ್ನ ಮುಂಭಾಗವನ್ನು ತೆರವುಗೊಳಿಸಿ ಮೃತದೇಹವನ್ನು ಹೊರತೆಗೆದರು.
ಈ ಅಪಘಾತದಲ್ಲಿ ಬೆಂಗಳೂರಿನ ಕಲ್ಯಾಣನಗರ ನಿವಾಸಿ ಉಮಾಕಾಂತ್ ರಾವ್ (77) ಎಂಬ ಪ್ರಯಾಣಿಕರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆ ಸೇರಿದಂತೆ ಸಮೀಪದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ. ಮೃತರ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ.
#KarunaaduTimes #Chikkaballapura #NH44 #RoadAccident #APSRTC #AndhraPradesh #Bengaluru #Kurnool #BreakingNews #KarnatakaNews #HighwayAccident #LatestNews #KannadaNews #AccidentNews #ChikkaballapuraNews #ViralNews #KarunaaduTimesExclusive