ಬೆಂಗಳೂರು: ಶಿವಾಜಿನಗರದಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆ ವೇಳೆ ಜಿಬಿಎ (GBA) ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳು ಇದೀಗ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಪೊಲೀಸರ ಎದುರು ಕೈಮುಗಿದು ಕ್ಷಮೆಯಾಚಿಸಿರುವ ಅವರು, "ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು ಎಂಬುದು ಈಗ ಅರಿವಾಗಿದೆ. ಇಂತಹ ತಪ್ಪು ಮತ್ತೆ ಎಂದಿಗೂ ಮಾಡುವುದಿಲ್ಲ" ಎಂದು ಮನವಿ ಮಾಡಿದ್ದಾರೆ.
ಪ್ರಕರಣದ ತನಿಖೆ ಮುಂದುವರಿದಿರುವ ವೇಳೆ ಹಲವು ಮಹತ್ವದ ಸಂಗತಿಗಳು ಬೆಳಕಿಗೆ ಬಂದಿವೆ. ಘಟನೆ ಆಕಸ್ಮಿಕವಾಗಿ ನಡೆದದ್ದಲ್ಲ, ಬದಲಾಗಿ ಮುಂಚಿತವಾಗಿಯೇ ಯೋಜನೆ ರೂಪಿಸಿ ದಾಳಿ ನಡೆಸಲಾಗಿದೆ ಎಂಬ ಅನುಮಾನಕ್ಕೆ ಬಲವಾದ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.
ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಪ್ರಮುಖ ಆರೋಪಿ ಬಸವರಾಜ್ ಪಡುಕೋಟೆ ಸೇರಿದಂತೆ ಒಟ್ಟು 11 ಮಂದಿಯನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ, ಫುಟ್ಪಾತ್ ತೆರವು ಕಾರ್ಯಾಚರಣೆ ನಡೆಯುವ ಮಾಹಿತಿ ಸಿಕ್ಕ ತಕ್ಷಣ ಆರೋಪಿಗಳು ಸಭೆ ನಡೆಸಿ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂಬುದು ತಿಳಿದುಬಂದಿದೆ.
ಇದರ ಜೊತೆಗೆ, ಪ್ರಮುಖ ಆರೋಪಿಯ ಸೂಚನೆಯಂತೆ ಪೆಪ್ಪರ್ ಸ್ಪ್ರೇ ಖರೀದಿಸಲಾಗಿತ್ತು ಎಂಬ ಅಂಶವೂ ತನಿಖೆಯಲ್ಲಿ ಬಹಿರಂಗವಾಗಿದೆ. ಕಾರ್ಯಾಚರಣೆ ವೇಳೆ ಪೊಲೀಸರು ಹಾಗೂ ಮಾಧ್ಯಮ ಪ್ರತಿನಿಧಿಗಳು ಕಡಿಮೆ ಸಂಖ್ಯೆಯಲ್ಲಿ ಇರುವ ಸಮಯವನ್ನು ಆಯ್ಕೆ ಮಾಡಿಕೊಂಡು ದಾಳಿ ನಡೆಸುವ ಉದ್ದೇಶ ಇತ್ತು ಎಂಬ ಮಾಹಿತಿಯೂ ತನಿಖೆಯಲ್ಲಿ ಹೊರಬಿದ್ದಿದೆ.
ಘಟನೆಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಬಂಧನದ ಬಳಿಕ ಆರೋಪಿಗಳು ಕ್ಷಮೆಯಾಚಿಸಿರುವ ದೃಶ್ಯಗಳನ್ನೂ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
Tags:#Bengaluru #Shivajinagar #GBA #Footpath #CrimeNews #Karnataka #BreakingNews #Police #KannadaNews #KarunaaduTimes #BengaluruNews
🌐 Visit: www.karunaadutimes.com�
📲 Fast • Trusted • Kannada News 24×7
⭐ Follow Karunaadu Times for Every Big Update