ಬೆಂಗಳೂರು: ಪಶುವೈದ್ಯಾಧಿಕಾರಿಗಳ (Veterinary Officer) ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (KPSC) ಮಹತ್ವದ ಕ್ರಮ ಕೈಗೊಂಡಿದೆ. ಅಂತಿಮ ಆಯ್ಕೆ ಪಟ್ಟಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದ್ದು, ಆರೋಪಗಳ ಸಮಗ್ರ ಪರಿಶೀಲನೆಗಾಗಿ ಆಂತರಿಕ ತನಿಖಾ ಉಪಸಮಿತಿಯನ್ನು ರಚಿಸಲಾಗಿದೆ.
2026ರ ಜುಲೈ 24ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಜೊತೆಗೆ, ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಗಳು ಹಾಗೂ ಜುಲೈ 25ರಂದು ಪೊಲೀಸ್ ಇಲಾಖೆ ದಾಖಲಿಸಿರುವ ಪ್ರಾಥಮಿಕ ಮಾಹಿತಿ ವರದಿ (FIR)ಯನ್ನು ಗಂಭೀರವಾಗಿ ಪರಿಗಣಿಸಿದ ಆಯೋಗವು ಜುಲೈ 26ರಂದು ತುರ್ತು ಸಭೆ ನಡೆಸಿದೆ.
ಸಭೆಯ ಬಳಿಕ ಪ್ರಕಟಿಸಿರುವ ಮಾಹಿತಿಯಲ್ಲಿ, ಸಾರ್ವಜನಿಕರ ವಿಶ್ವಾಸ ಕಾಪಾಡುವುದು ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆಯನ್ನು ಖಚಿತಪಡಿಸುವ ಉದ್ದೇಶದಿಂದ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ಕೆ. ಜ್ಯೋತಿ ತಿಳಿಸಿದ್ದಾರೆ.
ಅದರಂತೆ, ಆರೋಪಗಳ ಸತ್ಯಾಸತ್ಯತೆ ಪರಿಶೀಲಿಸಲು ಆಯೋಗದ ಹಿರಿಯ ಸದಸ್ಯರ ನೇತೃತ್ವದಲ್ಲಿ ಆಂತರಿಕ ತನಿಖಾ ಉಪಸಮಿತಿಯನ್ನು ರಚಿಸಲಾಗಿದೆ. ತನಿಖಾ ವರದಿ ಸಲ್ಲಿಕೆಯಾಗುವವರೆಗೆ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸದಿರಲು ತೀರ್ಮಾನಿಸಲಾಗಿದೆ.
ಆಯೋಗವು ಪೊಲೀಸ್ ಇಲಾಖೆಯ ತನಿಖೆಗೆ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದ್ದು, ತನಿಖೆಯಲ್ಲಿ ಲಭ್ಯವಾಗುವ ಮಾಹಿತಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದೆ.
ನೇಮಕಾತಿ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಮಹತ್ವದ್ದಾಗಿದೆ ಎಂದು ಆಡಳಿತ ವಲಯದಲ್ಲಿ ಚರ್ಚೆಯಾಗುತ್ತಿದೆ.