ಕೊಡಗು: ಕಾಡು–ನಾಡಿನ ಸಂಘರ್ಷ ಮತ್ತೊಮ್ಮೆ ಆತಂಕ ಮೂಡಿಸಿದ್ದು, ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮದ ಸಮೀಪದ ಕಾಫಿ ತೋಟದಲ್ಲಿ ಹಾಡಹಗಲೇ ರೈತ ಮಹಿಳೆಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ನಡೆದಿದೆ.
ದಾಳಿಯಲ್ಲಿ ಗ್ರಾಮದ ನಿವಾಸಿ ಲೀಲಾ (60) ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಫಿ ತೋಟದಲ್ಲಿ ಕಾರ್ಮಿಕರ ಕೆಲಸದ ಮೇಲ್ವಿಚಾರಣೆ ನಡೆಸುತ್ತಿದ್ದ ವೇಳೆ ಪೊದೆಗಳಿಂದ ಏಕಾಏಕಿ ಹೊರಬಂದ ಚಿರತೆ ಅವರ ಮೇಲೆ ಎರಗಿದೆ. ದಾಳಿಯಿಂದ ಎಡ ಕಿವಿ ಹಾಗೂ ದವಡೆ ಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಮಹಿಳೆಯ ಕಿರುಚಾಟ ಕೇಳಿ ಧಾವಿಸಿದ ಕಾರ್ಮಿಕರು ಧೈರ್ಯದಿಂದ ಚಿರತೆಯನ್ನು ಓಡಿಸಿ ಅವರನ್ನು ರಕ್ಷಿಸಿದ್ದಾರೆ.
ಗಾಯಾಳುವನ್ನು ತಕ್ಷಣ ಗೋಣಿಕೊಪ್ಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ವೈದ್ಯರ ಮಾಹಿತಿ ಪ್ರಕಾರ ಲೀಲಾ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಘಟನೆ ಮಾಲ್ದಾರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಮತ್ತು ರೈತರು ಭಯದ ವಾತಾವರಣದಲ್ಲಿ ದಿನ ಕಳೆಯುವಂತಾಗಿದೆ.
ಘಟನಾ ಸ್ಥಳಕ್ಕೆ ತಿತಿಮತಿ ವಲಯ ಅರಣ್ಯಾಧಿಕಾರಿ ಗಂಗಾಧರ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಉಪವಲಯ ಅರಣ್ಯಾಧಿಕಾರಿ ಶಶಿ ಪಿ.ಟಿ. ಆಸ್ಪತ್ರೆಗೆ ತೆರಳಿ ಗಾಯಾಳುವಿನ ಆರೋಗ್ಯ ವಿಚಾರಿಸಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕಾಫಿ ತೋಟದಲ್ಲಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ.
ಚಿರತೆಯ ಚಲನವಲನ ಪತ್ತೆಹಚ್ಚಲು ತೋಟದಲ್ಲಿ ಬೋನ್ ಹಾಗೂ ಕ್ಯಾಮೆರಾ ಟ್ರ್ಯಾಪ್ಗಳನ್ನು ಅಳವಡಿಸಲಾಗಿದೆ. ದಾಳಿ ನಡೆಸಿದ ಚಿರತೆಗೆ ಗಾಯವಾಗಿರುವ ಸಾಧ್ಯತೆಯಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದೇ ಹಿನ್ನೆಲೆಯಲ್ಲಿ ವಿಶೇಷ ನಿಗಾವಹಿಸಿರುವ ಅರಣ್ಯ ಇಲಾಖೆ, ಅಗತ್ಯವಿದ್ದರೆ ಸಾಕಾನೆಗಳ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಲು ಸಿದ್ಧತೆ ಮಾಡಿಕೊಂಡಿದೆ.
ವನ್ಯಜೀವಿ ವೈದ್ಯಾಧಿಕಾರಿ ಡಾ. ರಮೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿದು ಜನರಲ್ಲಿ ಉಂಟಾಗಿರುವ ಆತಂಕ ನಿವಾರಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.
ಇತ್ತೀಚಿನ ದಿನಗಳಲ್ಲಿ ಕಾಡಾನೆ, ಹುಲಿ ಹಾಗೂ ಚಿರತೆಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಾನವ–ವನ್ಯಜೀವಿ ಸಂಘರ್ಷ ತಡೆಯಲು ಶಾಶ್ವತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಸರ್ಕಾರ ಹಾಗೂ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.